ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ : ಶಾಸಕ ಅಭಯ್ ಕುಮಾರ್ ಪಾಟೀಲ್ ವಿರುದ್ಧದ ಎಫ್ಐಆರ್ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು : ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣ ಸಂಬಂಧ ಬೆಳಗಾವಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಅಭಯ್ ಕುಮಾರ್ ಬಿ.ಪಾಟೀಲ್ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿದ್ದ ಎಫ್ಐಆರ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಎಫ್ಐಆರ್ ಮತ್ತು ನಗರದ 81ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ (ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ) ವಿಚಾರಣೆ ರದ್ದು ಕೋರಿ ಶಾಸಕ ಅಭಯ್ ಕುಮಾರ್ ಪಾಟೀಲ್ ಸಲ್ಲಿಸಿದ್ದ ಅರ್ಜಿಯನ್ನು ಮಾನ್ಯ ಮಾಡಿರುವ ನ್ಯಾ.ಎಂ.ಐ.ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಈ ಆದೇಶ ಮಾಡಿದೆ.
ಖಾಸಗಿ ದೂರದಾರರು 2012ರಲ್ಲಿ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ದೂರು ದಾಲಿಸಿದ್ದರು. ಆದರೆ, ಲೋಕಾಯುಕ್ತ ಪೊಲೀಸರು ಪ್ರಕರಣ ಕುರಿತು ವಿಶೇಷ ನ್ಯಾಯಾಲಯದ ಮುಂದೆ ಯಾವುದೇ ದೋಷಾರೋಪ ಪಟ್ಟಿ ಸಲ್ಲಿಸಿಲ್ಲ. ಜತೆಗೆ, ವಿಶೇಷ ನ್ಯಾಯಾಲಯವು ಪ್ರಕರಣವನ್ನು ವಿಚಾರಣೆಗೆ ಪರಿಗಣಿಸುವುದಕ್ಕಾಗಿ ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಸಹ ಪಡೆದುಕೊಂಡಿಲ್ಲ. ಆದ್ದರಿಂದ, ಪ್ರಕರಣವನ್ನು ಮುಂದುವರಿಸಲು ಅನುಮತಿ ನೀಡುವ ವಿಚಾರ ಉದ್ಭವಿಸುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಪೀಠ, ಅಭಯ್ ಕುಮಾರ್ ಪಾಟೀಲ್ ವಿರುದ್ಧದ ಎಫ್ಐಆರ್ ರದ್ದುಪಡಿಸಿದೆ.